ಉಡುಪಿ: ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವ ಜೊತೆಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಅಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ 4 ರಂದು ನಗರದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು ಅಂದು ಬೆಳಗ್ಗೆ 9.30 ರಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ, ಅವರ ಕಾಳಜಿ ಹಾಗೂ ಆರೈಕೆ ಕುರಿತು ವಿಶೇಷ ಉಪನ್ಯಾಸ, ಸರಕಾರದಿಂದ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಹಾಗೂ ಸೈಬರ್ ಕ್ರೆöÊಮ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದ ಅವರು, ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸೆಪ್ಟೆಂಬರ್ 16 ರಂದು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದರು.
ಹಿರಿಯ ನಾಗರಿಕರಿಗೆ ಯಾವುದೇ ಕುಂದುಕೊರತೆ ಉಂಟಾಗದAತೆ ಕುಡಿಯುವ ನೀರು, ಊಟೋಪಚಾರ ಸೇರಿದಂತೆ ಎಲ್ಲ ಮೂಲಭೂತ ಅವಶ್ಯಕತೆಗಳ ಪಟ್ಟಿ ಮಾಡಿ ವಿವಿಧ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಟನೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಶಿಷ್ಟಾಚಾರದಂತೆ ಅಹ್ವಾನ ಪತ್ರಿಯನ್ನು ಮುದ್ರಿಸಿ ಜನಪ್ರತಿನಿಧಿ ಹಾಗೂ ಗಣ್ಯರಿಗೆ ನೀಡಿ ಆಹ್ವಾನಿಸಬೇಕು ಎಂದ ಅವರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಚ್ಚಿನ ಪ್ರಚಾರ ನೀಡಬೇಕು ಎಂದರು.
ಜಿಲ್ಲಾ ಮಟ್ಟದಲ್ಲಿ ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ ಹಾಗೂ ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಗಾಯನ ಮತ್ತು ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ಆಯೋಜಿಸಿದ್ದು, 60-69 ವಯೋಮಾನದ ಮಹಿಳೆಯರ ವಿಭಾಗದ ಗಾಯನ ಸ್ಪರ್ಧೆಯಲ್ಲಿ ಹಾಗೂ ಪುರುಷರ ವಿಭಾಗದ ಬಿರುಸಿನ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವವರಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಿಗಳ ಪ್ರಯಾಣ ದರ, ಊಟೋಪಚಾರ ವ್ಯವಸ್ಥೆ (ವಸತಿ ಹೊರತುಪಡಿಸಿ) ಯನ್ನು ಇಲಾಖೆಯ ವತಿಯಿಂದ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.












