ಮಂಗಳೂರು: ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರು ಎ.ಜೆ.ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮಂಗಳೂರು ಮೂಲದ ಕದ್ರಿ ಗೋಪಾಲನಾಥ್ ಕೆಲದಿನಗಳಿಂದ ಅಸೌಖ್ಯದಿಂದ ಎ.ಜೆ.ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕದ್ರಿ ಗೋಪಾಲನಾಥ್, ಖ್ಯಾತ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಅವರ ತಂದೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಕದ್ರಿ ಗೋಪಾಲನಾಥ್ 1950ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಜನಿಸಿದರು. ತಂದೆ ತನಿಯಪ್ಪ ಹಾಗೂ ತಾಯಿ ಗಂಗಮ್ಮ.
ಇವರ ತಂದೆ ಕರಾವಳಿಯ ಖ್ಯಾತ ನಾಗಸ್ವರ ವಿದ್ವಾಂಸರಾಗಿದ್ದರು. ಗೋಪಾಲನಾಥರ ಕಚೇರಿಗಳು ರಾಜ್ಯದಲ್ಲಿ ಮಾತ್ರವಲ್ಲದೇ ಯೂರೋಪ್, ಸ್ವಿಜರ್‌ಲ್ಯಾಂಡ್, ಯುನೈಟೆಡ್ ಕಿಂಗ್ಡಂ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಸಿಂಗಪೂರ್, ಬಹರೇನ್, ಕ್ವೆಟಾರ್, ಮಸ್ಕಟ್, ಮಲೇಷಿಯಾ, ಶ್ರೀಲಂಕಾ ಹೀಗೆ ಇತರ ರಾಷ್ಟ್ರದಲ್ಲೂ ಜನಮನ್ನಣೆ ಗಳಿಸಿತ್ತು.