ಮಂಗಳೂರು: ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಅ.23ರ ರಾತ್ರಿಯಿಂದ ತೀವ್ರಗತಿಯಲ್ಲಿ ಮಳೆಯಾಗುತ್ತಿದೆ. ಹೀಗಾಗಿ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸನ್ನಿವೇಶವು ಉದ್ಭವಿಸಿದ್ದು, ಇದು ತೀವ್ರ ರೂಪ ಪಡೆದುಕೊಂಡು ಇನ್ನಷ್ಟು ಬಿರುಸಾಗಿ ಮಳೆಯಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ ಅನುದಾನಿತ ಮತ್ತು ಪಿಯು ತರಗತಿವರೆಗೆ ನಾಳೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರಿಗೆ ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜತೆಗೆ ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.