ಹೊಸ ವರ್ಷಾಚರಣೆ: ಉಡುಪಿ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್, ಪೆಟ್ರೋಲಿಂಗ್, ಡ್ರೋನ್ ನಿಗಾ

ಉಡುಪಿ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್ ಬಲ, ಪೆಟ್ರೋಲಿಂಗ್ ಹಾಗೂ ನಿಗಾ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಹೊಸವರ್ಷವನ್ನು ಆಚರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಹೊಸ ವರ್ಷ ಆಚರಣೆಯ ಪೊಲೀಸ್ ಬಂದೋಬಸ್ತ್ ಕುರಿತು ಮಾಹಿತಿ ನೀಡಿದ ಅವರು ಹೊಸ ವರ್ಷದ ದಿನದಂದು ಜಿಲ್ಲೆಯಲ್ಲಿರುವ ಎಲ್ಲಾ ಹೈವೇ ಪಟ್ರೋಲ್ ಹಾಗೂ ಹೊಯ್ಸಳ ವಾಹನಗಳನ್ನು ಕಡ್ಡಾಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಸ್ತಿಗೆ ನಿಯೋಜಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರು, ವೀಲಿಂಗ್ ನಡೆಸುವವರು ಹಾಗೂ ಇತರೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಡಿಸೆಂಬರ್ 31ರ ಬೆಳಿಗ್ಗೆ ಕರಾವಳಿ ಪ್ರದೇಶದ ಸಮುದ್ರ ತೀರಗಳು ಹಾಗೂ ಬೀಚ್ಗಳಲ್ಲಿ ನಡೆಯುವ ಹೊಸ ವರ್ಷದ ಆಚರಣೆಗಳ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಿಎಸ್ಪಿ ಠಾಣೆಯ ಅಧಿಕಾರಿಗಳು ಹಾಗೂ ಸಂಬಂಧಿತ ಪೊಲೀಸ್ ಠಾಣಾಧಿಕಾರಿಗಳ ಸಭೆ ನಡೆಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಜಿಲ್ಲೆಯ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯೊಳಗೆ ಹೊಸ ವರ್ಷಾಚರಣೆ ನಡೆಯುವ ಹೋಂ ಸ್ಟೇಗಳು, ಹೋಟೆಲ್ಗಳು, ರೆಸಾರ್ಟ್ಗಳು, ಪಬ್ಗಳು ಮತ್ತು ಬಾರ್ಗಳನ್ನು ಪರಿಶೀಲಿಸಿ, ರೇವ್ ಪಾರ್ಟಿ, ಡ್ರಗ್ ಪಾರ್ಟಿ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ವೇಳೆ ಸಾಮಾಜಿಕ ಜಾಲತಾಣಗಳು, ಆನ್ಲೈನ್ ಬುಕಿಂಗ್ಗಳು ಹಾಗೂ ವೆಬ್ಪುಟಗಳನ್ನು ಪರಿಶೀಲಿಸಿ ಕಾರ್ಯಕ್ರಮಗಳ ವ್ಯವಸ್ಥೆಗಳ ಕುರಿತು ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ ಗಳಲ್ಲಿ ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ನಗರ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾ “ಅಕ್ಕಪಡೆ” ತಂಡವನ್ನು ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ವಿದೇಶಿ ನಾಗರಿಕರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ “Celebrate Responsibly” (ಜವಾಬ್ದಾರಿಯಿಂದ ಆಚರಿಸಿ) ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಲಾಗಿದೆ. ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಒಟ್ಟು 13 ಡಿಎಆರ್ ತುಕಡಿ ಹಾಗೂ 2 ಕೆಎಸ್ಆರ್ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳು ಹಾಗೂ ಪೊಲೀಸ್‌ ಸಿಬ್ಬಂದಿಯವರನ್ನು ನಿಯೋಜಿಸಲಾಗಿದೆ. 3 ಡ್ರೋನ್‌ ಕ್ಯಾಮೆರಾ, 10 ಹೆಚ್ಚುವರಿ ಪೆಟ್ರೋಲಿಂಗ್‌ ವಾಹನಗಳು ಹಾಗೂ 24 Public Address Systemನ್ನು ಬಳಸಿಕೊಳ್ಳಲಾಗಿದೆ ಎಂದರು.