ದ.ಕ. ಜಿಲ್ಲೆ: ಸಂಭ್ರಮದ ಕನ್ನಡ ರಾಜ್ಯೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶವುಂಟಾಗಿದೆ.‌ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಂದಿನ ವರ್ಷ ನೀಡುವುದಾಗಿ ಅವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಅಂಬೇಡ್ಕರ್ ವೃತ್ತದಿಂದ ಜ್ಯೋತಿ ವೃತ್ತದ ವರೆಗೆ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆಯಿತು. ನೆಹರೂ ಮೈದಾನದವರೆಗೆ ಹಮ್ಮಿಕೊಂಡ ಮೆರವಣಿಗೆಯಲ್ಲಿ ಕರಾವಳಿಯ ಹುಲಿವೇಷ, ಕರಂಗೋಲು, ಡೋಲು ನೃತ್ಯ ಸೇರಿದಂತೆ ಅರಣ್ಯ, ಆರೋಗ್ಯ ಇಲಾಖೆ, ತೋಟಗಾರಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ತಂಡ ಪಾಲ್ಗೊಂಡು ಮೆರುಗು ನೀಡಿದವು.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಡಾ.ಭರತ್ ಶೆಟ್ಟಿ, ಐವನ್ ಡಿಸೋಜಾ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ತುಳು ಅಕಾಡೆಮಿಯ ಅಧ್ಯಕ್ಷರು ಸೇರಿ ಮತ್ತಿತರರು ಉಪಸ್ಥಿತರಿದ್ದರು.