ಉಡುಪಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ ಯೋಜನೆ)ಯ ಹೆಸರು ಬದಲಾವಣೆ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಗೂ ಮುನ್ನ ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಬಡವರ ಪರವಾದ ಯೋಜನೆಗಳನ್ನು ಕೇಂದ್ರ ಸರಕಾರ ಬದಲಾವಣೆ ಮಾಡುವ ಮೂಲಕ ಬಡವರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಮನರೇಗಾ ಯೋಜನೆ ಉಳಿಸಲು ರೈತರ ಚಳವಳಿ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಕಾರ್ಯಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡರುಗಳಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರಿಪ್ರಸಾದ್ ರೈ ಮೊದಲಾದವರು ಭಾಗವಹಿಸಿದ್ದರು.
















