ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ; 7.10 ಲಕ್ಷ ವಿಧ್ಯಾರ್ಥಿಗಳು ನೊಂದಣಿ.!

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆ.28ರಿಂದ ಆರಂಭ ಆಗಲಿದ್ದು, ಮೊದಲ ದಿನ ಕನ್ನಡ, ಅರೆಬಿಕ್‌ ಭಾಷಾ ಪರೀಕ್ಷೆಗಳು ನಡೆಯಲಿವೆ.5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. 1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರವೂ ಸಿ.ಸಿ.ಟಿ.ವಿ ಕ್ಯಾಮೆರಾ ಒಳಗೊಂಡಿದೆ. ವಿವಿಧ ಹಂತದ ಅಧಿಕಾರಿಗಳು ವೆಬ್‌ಕಾಸ್ಟಿಂಗ್‌ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಲಿದ್ದು, ಪರೀಕ್ಷಾ ಕೇಂದ್ರದ ಹೊರಗೂ ಕಟ್ಟುನಿಟ್ಟಿನ ಕಣ್ಗಾವಲಿಗೆ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್‌ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್‌ ಫೋನ್‌, ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ನಿಷೇಧಿಸಲಾಗಿದೆ. ಹಿಂದಿನ ವರ್ಷದಂತೆ ಈ ಬಾರಿಯೂ ವಸ್ತ್ರಸಂಹಿತೆ ಇರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಲೃಷ್ಣ ಮಾಹಿತಿ ನೀಡಿದರು.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಬೇಕಿರುವ ಕನಿಷ್ಠ ಅಂಕವನ್ನು ಈ ಬಾರಿ ಶೇ 33ಕ್ಕೆ ನಿಗದಿ ಮಾಡಲಾಗಿದೆ. ಹೊಸ, ಪುನರಾವರ್ತಿತ ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದೆ.