ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಪ್ರಸ್ತುತ ಬೇಸಿಗೆಯ ಹಿನ್ನೆಲೆ, ಬಿಸಿಲಿನ ಪ್ರಖರತೆ ದಿನೇ ದಿನೇ ಹೆಚ್ಚುತ್ತಿದ್ದು, ಶಾಖದ ಹೊಡೆತದಿಂದ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹೊರಡಿಸಲಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಅತೀ ಹೆಚ್ಚು ತಾಪಮಾನದದಿಂದ ಮಾನವನ ಮೇಲೆ ಸಾಮಾನ್ಯವಾಗಿ ನಿರ್ಜಲೀಖರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು ಶಾಖದ ಆಘಾತದಂತಹ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಈ ಬಗ್ಗೆ ರಕ್ಷಣೆ ಪಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಪೋಸ್ಟರ್, ಬ್ಯಾನರ್, ಜಿಂಗಲ್ಸ್ ಗಳ ಮೂಲಕ ಮಾಹಿತಿ ನೀಡುವುದರೊಂದಿಗೆ, ಅರಿವು ಮೂಡಿಸಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅತೀ ಹೆಚ್ಚು ತಾಪಮಾನಕ್ಕೆ ಸಂಬoಧಿಸಿದ ಅನಾರೋಗ್ಯವನ್ನು ತಡೆಗಟ್ಟಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓ.ಆರ್.ಎಸ್ ಸೇರಿದಂತೆ ಇತರೆ ಔಷಧಿಗಳನ್ನು ಹೆಚ್ಚಾಗಿ ದಾಸ್ತಾನು ಇರಿಸಿಕೊಂಡಿರಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮಾರುಕಟ್ಟೆ, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.

ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬAದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಕುಡಿಯುವ ನೀರಿನ ಕೊರತೆ ಎದುರಾಗಬಹುದಾದ ವಾರ್ಡ್ ಹಾಗೂ ಗ್ರಾಮಗಳಲ್ಲಿ, ಬೋರ್‌ವೆಲ್‌ಗಳನ್ನು ಗುರುತಿಸಿ ಅವುಗಳ ಮೂಲಕ ಹಾಗೂ ಟ್ಯಾಂಕರ್‌ಗಳ ಮೂಲಕ ನೀರು ಒದಗಿಸಲು ಕ್ರಮ ವಹಿಸಬೇಕು ಎಂದ ಅವರು, ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಅಗತ್ಯ ಕ್ರಮವಹಿಸಬೇಕು. ಆಗಿಂದಾಗ್ಗೆ ಕುಡಿಯುವ ನೀರಿನ ಪರೀಕ್ಷೆಗಳನ್ನು ಸಹ ಕಡ್ಡಾಯವಾಗಿ ಮಾಡಿಸಬೇಕು ಎಂದರು.

ಬೇಸಿಗೆ ದಿನಗಳಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುವ ಕಡೆಗಳಲ್ಲಿ ಅವಶ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದ ಅವರು, ಪ್ರಸ್ತುತ ಜಿಲ್ಲೆಯಲ್ಲಿ ದನಕಾರುಗಳಿಗೆ ಮೇವಿನ ಕೊರತೆ ಕಂಡು ಬಂದಿಲ್ಲ. ಎಲ್ಲಾ ತಾಲೂಕುಗಳಲ್ಲಿ ಮುಂದಿನ 39 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನಿರುವುದಾಗಿ ತಿಳಿಸಿದರು.

ಬೇಸಿಗೆ ದಿನಗಳಲ್ಲಿ ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚು ಇರುತ್ತವೆ. ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಿಂದಾಗ್ಗೆ ತಪಾಸಣೆ ಕೈಗೊಳ್ಳಬೇಕು. ಅಗ್ನಿ ಅನಾಹುತಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದ ಅವರು, ಕಳೆದ ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗಳನ್ನು ನಡೆಸಿ, ವರದಿ ನೀಡುವಂತೆ ತಿಳಿಸಿದ್ದರೂ ಸಹ ಇದುವರೆಗೂ ಆಡಿಟ್ ಅನ್ನು ಪೂರ್ತಿಯಾಗಿ ನಡೆಸಿ ವರದಿ ನೀಡದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೆ ಅಗ್ನಿ ಸುರಕ್ಷತಾ ಆಡಿಟ್‌ಗಳನ್ನು ನಡೆಸಿ ವರದಿ ನೀಡುವಂತೆ ಅಗ್ನಿ ಶಾಮಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ನಿರಂತರವಾಗಿ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆ ಉಂಟಾಗದoತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ತೈಲ ಸೋರಿಕೆ ಪ್ರಕರಣಗಳಾದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯ ಸದಸ್ಯರುಗಳು ತುರ್ತು ಸಂದರ್ಭವನ್ನು ಎದುರಿಸುವ ಕ್ರಿಯಾ ಯೋಜನೆಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೋಳ್ಳಿ, ಸಹಾಯಕ ಕಮಿಷನರ್ ರಶ್ಮಿ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.