ಉಡುಪಿ: ದ.ಕ. ಜಿಲ್ಲೆಯಲ್ಲಿ ಕೃಷಿ ಕ್ಷೇತ್ರಕ್ಕೆ ನೀಡಿದ ಶೇ.100ರಷ್ಟು ಸಾಲ ಮರುಪಾವತಿ ಆಗುತ್ತಿರುವುದು ಹೆಮ್ಮೆಯ ವಿಚಾರ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಮ್ಮಲ್ಲಿ ಠೇವಣೆ ಇಡಲು ಹಿಂದೇಟು ಹಾಕುತ್ತದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಹಾಗೂ ರಾಜ್ಯದ ಎಲ್ಲಾ ಸಹಕಾರ ಶೃಂಗ ಸಂಸ್ಥೆಗಳು, ದ.ಕ.ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೋಮವಾರ ನಡೆದ 66ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
ತ್ವರಿತವಾಗಿ ಸಾಲ ನೀಡುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಿರುವ ಭೂಮಿ ತಂತ್ರಾಂಶವನ್ನು ಅಳವಡಿಸಿಕೊಂಡು ರೈತರಿಗೆ ಸ್ಥಳದಲ್ಲೇ ಸಾಲ ಮಂಜೂರು ಮಾಡಲಾಗುವುದು ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್. ಗಂಗಣ್ಣ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೂತನ ಆರ್ಥಿಕ ನೀತಿಗಳಿಂದ ಸಹಕಾರಿ ಕ್ಷೇತ್ರ ಸಂಕಷ್ಟಕ್ಕೆ ಒಳಗಾಗಿದೆ. ರಾಷ್ಟ್ರೀಕೃತ ಬ್ಯಾಂಕ್ಗಳು ನಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಸರ್ಕಾರ ನೆರವು ನೀಡುತ್ತದೆ. ಆದರೆ ಸಹಕಾರಿ ಬ್ಯಾಂಕ್ಗಳ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದರು.
ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾಪಂ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಸಹಕಾರಿಗಳಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಸರಳಾ ಕಾಂಚನ್, ಕೆ.ಕೆ. ಸರಳಾಯ, ಗೋಪಿಕೃಷ್ಣ ರಾವ್, ಅಲೆವೂರು ಹರೀಶ್ ಕಿಣಿ, ಶಿವಕುಮಾರ್ ಗೌಡ ಪಾಟೀಲ್, ಪ್ರಕಾಶ್ಚಂದ್ರ ಶೆಟ್ಟಿ, ಕೆಎಂಎಫ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಸ್ಕ್ಯಾಡ್ಸ್ ಮಂಗಳೂರು ಅಧ್ಯಕ್ಷ ರವೀಂದ್ರ ಕಂಬಳಿ, ಕೆಎಂಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ
ಸುದರ್ಶನ್ ಜೈನ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಎಸ್.ಕೆ. ಮಂಜುನಾಥ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ, ಪ್ರಾಸ್ತಾವನೆಗೈದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪಿ. ಪುರುಷೋತ್ತಮ್ ವಂದಿಸಿ, ವಾಲ್ಸ್ಟನ್ ಶಂಕರಪುರ ನಿರೂಪಿಸಿದರು.