ಉಡುಪಿ: ರಂಗಭೂಮಿ ಉಡುಪಿಯ 40ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ನ. 21ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಸಂಜೆ 6ಗಂಟೆಗೆ ಎಂಜಿಎಂ ಕಾಲೇಜಿನ ಪ್ರಾಶುಂಪಾಲ ಎಂ.ಜಿ. ವಿಜಯ ಅವರು ನಾಟಕ ಸ್ಪರ್ಧೆಗೆ ಚಾಲನೆ ನೀಡುವರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಕುಮಾರ ಬಿಕ್ಕೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಡಾ. ಟಿಎಂಎ ಪೈ, ಎಸ್.ಎಲ್. ನಾರಾಯಣ ಭಟ್ ಹಾಗೂ ಮಲ್ಪೆ ಮಧ್ವರಾಜ್ ಸ್ಮರಣಾರ್ಥವಾಗಿ ನಡೆಯುವ ಈ ಸ್ಪರ್ಧೆಯಲ್ಲಿ ಬೆಂಗಳೂರಿನ 5, ಉಡುಪಿಯ 2, ಮೈಸೂರಿನ 2, ಮಂಗಳೂರಿನ 1, ಬಳ್ಳಾರಿಯ 1 ಹಾಗೂ ಬೆಳಗಾವಿಯ 1 ತಂಡ ಭಾಗವಹಿಸಲಿವೆ. ಒಟ್ಟು 12 ದಿನಗಳ ಕಾಲ 12 ನಾಟಕಗಳು ಪ್ರದರ್ಶನಗೊಳ್ಳಲಿವೆ. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆಯುವ
ತಂಡಗಳಿಗೆ ಕ್ರಮವಾಗಿ 35 ಸಾವಿರ, 25 ಸಾವಿರ, 15 ಸಾವಿರ ನಗದು ಪುರಸ್ಕಾರ ನೀಡಲಾಗುವುದು. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಪ್ರಸಾದನ, ರಂಗಪರಿಕರ, ಸಂಗೀತ, ಬೆಳಕು, ಹಾಸ್ಯನಟ, ಬಾಲನಟ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ
ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಚಿತ್ರಕಲಾವಿದ ರಮೇಶ್ ರಾವ್, ಹೊರನಾಡಿನ ಕನ್ನಡಿಗ ಬಿ.ಜಿ. ಮೋಹನ್‌ದಾಸ್, ನೇತ್ರ ತಜ್ಞ ಡಾ. ಕೃಷ್ಣಪ್ರಸಾದ್ ಅವರನ್ನು ಗೌರವಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಉಪಾಧ್ಯಕ್ಷ ಎಂ. ನಂದಕುಮಾರ್, ಜಂಟಿ ಕಾರ್ಯದರ್ಶಿ ಭಾಸ್ಕರ ರಾವ್ ಕಿದಿಯೂರು, ಸದಸ್ಯರಾದ ಮೇಟಿ ಮುದಿಯಪ್ಪ, ಶ್ರೀಪಾದ್ ಹೆಗಡೆ ಇದ್ದರು.