ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
25ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗಾಯಾಳುಗಳಲ್ಲಿ ಆಂಧ್ರಪ್ರದೇಶ ಹಾಗೂ ಬಳ್ಳಾರಿ ಮೂಲದ ಪ್ರಯಾಣಿಕರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರು.
ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಅಂಬುಲೆನ್ಸ್, ಚಾರ್ಮಾಡಿ ಹಸನಬ್ಬ ಅವರ ತಂಡ ಹಾಗೂ ರಾಜ್ಯೋತ್ಸವ ಸೇವಾ ಅಂಬುಲೆನ್ಸ್ ಸೇರಿದಂತೆ ರಿಕ್ಷಾ ಮತ್ತು ಖಾಸಗಿ ವಾಹನಗಳ ಮೂಲಕ ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಕೆಲವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಈ ಕುರಿತು ಹಸನಬ್ಬ ಅವರ ಪುತ್ರ ಹಾಗೂ ವಕೀಲ ಅಯಾಝ್ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.















