ಪುತ್ತೂರು: ಲಾರಿ–ಬೈಕ್ ಅಪಘಾತ; ವಿದ್ಯಾರ್ಥಿ ಸಾವು, ಯುವತಿಗೆ ಗಂಭೀರ ಗಾಯ

ಪುತ್ತೂರು: ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ ಹಿಂಬದಿ ಸವಾರಿಯಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ಗಾಯಗೊಂಡ ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿ ದ್ವಿಚಕ್ರ ವಾಹನಗಳಲ್ಲಿ ಹಿಂದಿರುಗುತ್ತಿದ್ದ ವಿದ್ಯಾರ್ಥಿಗಳ ತಂಡದ ಮೇಲೆ ಲಾರಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.

ಘಟನೆಯ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.