ಇಂದಿನಿಂದ ಮತ್ತೆ ಮಳೆಯ ಮುನ್ಸೂಚನೆ: ಯಾವೆಲ್ಲಾ ಜಿಲ್ಲೆಗಳಲ್ಲಿ ತಂಪೆರೆಯಲಿದ್ದಾನೆ ವರುಣ?

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಇದೀಗ ಕೊಂಚ ನೆಮ್ಮದಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ವ್ಯಕ್ತವಾಗಿದೆ.

ಕರಾವಳಿ ಭಾಗದಲ್ಲೂ ಮಳೆಯ ಚಟುವಟಿಕೆ ಚುರುಕುಗೊಂಡಿದೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದ್ದು, ಇಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕಾಸರಗೋಡು ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಹಗಲು ಬಿಸಿಲಿನ ವಾತಾವರಣ ಇದ್ದರೂ, ಸಂಜೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗಲು ಬಿಸಿಲು ಇದ್ದರೂ ಸಂಜೆ ಮತ್ತು ರಾತ್ರಿ ವೇಳೆಗೆ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೊಂದೆಡೆ, ಉತ್ತರ ಒಳನಾಡಿನ ಧಾರವಾಡ, ಗದಗ, ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಸಂಜೆ ಅಥವಾ ರಾತ್ರಿ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸಲಹೆ ನೀಡಿದೆ.