ಕಲಬುರಗಿ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಗಡಿ ಗುರುತಿಸುವಿಕೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಮೇ 8ರಂದು ಅಂತ್ಯಗೊಂಡಿದ್ದು, ಶೀಘ್ರದಲ್ಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು. ನಂತರ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ನೀರಿನ ಯೋಜನೆಗಳಿಗೆ ಸರ್ಕಾರದ ಬಳಿ ಯಾವುದೇ ಹಣದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ನೀರಿನ ಅಭಾವ ಎದುರಿಸುತ್ತಿರುವ 21 ಗ್ರಾಮಗಳಲ್ಲಿ ಹೊಸ ಕೊಳವೆಬಾವಿಗಳನ್ನು ತೋಡಲಾಗಿದ್ದು, ನಾಲ್ಕು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತಿ ಜಿಲ್ಲೆಗೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಅಗತ್ಯವಿದ್ದರೆ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯ ಜಿಲ್ಲೆಗಳಿಗೆ 17.30 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಅದರ ಶಿಫಾರಸುಗಳಂತೆ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಶಾಸಕರಾದ ಎಂ.ವೈ. ಪಾಟೀಲ್ ಹಾಗೂ ಬಿ.ಆರ್. ಪಾಟೀಲ್ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲಾಗಿದೆ. ಭೀಮಾ ನದಿಯಿಂದ ಕುಡಿಯುವ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

















