ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದ ಖ್ಯಾತ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಕಿರುತೆರೆಗೆ ಭರ್ಜರಿ ಕಂಬ್ಯಾಕ್ ಮಾಡಿದ್ದ ದಿಲೀಪ್ ರಾಜ್, ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. ಈ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಪಾತ್ರಕ್ಕೆ ವೀಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.
2005ರಲ್ಲಿ ಬಿಡುಗಡೆಯಾದ ಬಾಯ್ಫ್ರೆಂಡ್ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್ ರಾಜ್, ನಂತರ ಮಿಲನ ಸಿನಿಮಾದಲ್ಲಿನ ವಿಲನ್ ಪಾತ್ರದ ಮೂಲಕ ಹೆಚ್ಚಿನ ಖ್ಯಾತಿ ಗಳಿಸಿದರು. ಬಳಿಕ ಸುಗ್ರೀವ, ಗೆಳೆಯ, ಯೂ ಟರ್ನ್ ಸೇರಿದಂತೆ ಸುಮಾರು 28ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದ ಅವರು, ‘ಮನೆಯೊಂದು ಮೂರು ಬಾಗಿಲು’, ‘ರಥಸಪ್ತಮಿ’, ‘ಪ್ರೀತಿಗಾಗಿ’ ಮೊದಲಾದ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಇತ್ತೀಚೆಗೆ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದರು. ಕೊನೆಯದಾಗಿ ಲವ್ ಮಾಕ್ಟೇಲ್ 3 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.
ಇಂದು ಮುಂಜಾನೆ ದಿಲೀಪ್ ರಾಜ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು Apollo Hospital ನಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ದಿಲೀಪ್ ರಾಜ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.

















