ಮುಂದಿನ ಎರಡು ದಿನ ರಾಜ್ಯದ ವಿವಿದೆಡೆ ಭಾರೀ ಮಳೆಯ ಮನ್ಸೂಚನೆ, ಕರಾವಳಿಯಲ್ಲೂ ವರುಣನ ತಂಪು!

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಭಾಗಗಳಲ್ಲಿ ಮೇ 14 ಮತ್ತು 15ರಂದು ವ್ಯಾಪಕ ಮಳೆಯೊಂದಿಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮೇ 15ರಂದು ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ.ವರೆಗೆ ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲೂ ಮಳೆಯ ಮುನ್ಸೂಚನೆ ಇದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಮೇ 14ರಿಂದ 16ರವರೆಗೆ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ತೀವ್ರಗೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ.

ಇನ್ನು ದಾವಣಗೆರೆ, ವಿಜಯನಗರ, ಶಿವಮೊಗ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೂಡ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇದರ ನಡುವೆ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಈ ವಾರಾಂತ್ಯಕ್ಕೆ ಅಂಡಮಾನ್ ಪ್ರದೇಶ ಪ್ರವೇಶಿಸುವ ಸಾಧ್ಯತೆ ಇದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.