ಬೀದಿ ನಾಯಿಗಳ ಹಾವಳಿ ತಡೆಗೆ ಇರುವ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ನಗರ ಪ್ರದೇಶದಲ್ಲಿ 7197 ಹಾಗೂ ಗ್ರಾಮೀಣ ಭಾಗದಲ್ಲಿ 13,185 ಸೇರಿದಂತೆ ಸುಮಾರು 20,382 ಬೀದಿನಾಯಿಗಳನ್ನು ಗುರುತಿಸಲಾಗಿರುತ್ತದೆ. ಹಾಗೆಯೇ ಜಿಲ್ಲೆಯ ನಗರ ಭಾಗದಲ್ಲಿರುವ ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಬಸ್ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆಗಳು ಹಾಗೂ ಕ್ರೀಡಾಂಗಣ ಸೇರಿದಂತೆ ಒಟ್ಟು 253 ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 446 ಬೀದಿನಾಯಿಗಳನ್ನು ಗುರುತಿಸಲಾಗಿರುತ್ತದೆ ಎಂದ ಅವರು, ಪ್ರತೀ ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಬೀದಿ ನಾಯಿಗಳ ಉಪಟಳ ತಡೆಯಲು ನೇಮಕ ಮಾಡಲಾದ ನೋಡೆಲ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.

ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತç ಚಿಕಿತ್ಸೆ ನಡೆಸಲು ಹಳೆಯ ಕಟ್ಟಡಗಳನ್ನು ಗುರುತಿಸಿ, ಮಾಹಿತಿ ನೀಡುವಂತೆ ತಿಳಿಸಿದ ಅವರು, ಬೀದಿನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಪ್ರತೀ ತಾಲೂಕಿನಲ್ಲಿಯೂ ಆಶ್ರಯ ತಾಣಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಉಡುಪಿ ನಗರಸಭೆ, ಕುಂದಾಪುರ, ಕಾರ್ಕಳ ಹಾಗೂ ಕಾಪು ಪುರಸಭೆ, ಬೈಂದೂರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 11.91 ಎಕರೆ ಜಮೀನು ಮಂಜೂರು ಮಾಡಿದ್ದು, 33.93 ಲಕ್ಷ ಕ್ರಿಯಾ ಯೋಜನೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್ಗೆ ಒಂದರoತೆ ಹಾಗೂ ಪ್ರತೀ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರ ವಿತರಣೆಗೆ ಸ್ಥಳಗಳನ್ನು ಗುರುತಿಸಿ, ನಾಮಫಲಕ ಅಳವಡಿಸಿರುವ ಕುರಿತು ಮಾಹಿತಿ ನೀಡುವಂತೆ ಸೂಚಿಸಿದ ಅವರು, ಆಹಾರ ವಿತರಣಾ ತಾಣಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪೂರೈಕೆ ಮಾಡದಲ್ಲಿ ಅಂತಹವ ವಿರುದ್ಧ ಎಫ್.ಐ.ಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದರು.

ಜಿಲ್ಲೆಯ ನಗರ ಹಾಗೂ ಸ್ಥಳೀಯ ಸಂಸ್ಥೆಯವರು ಬೀದಿನಾಯಿಗಳ ಗುರುತಿಸುವಿಕೆ, ಸ್ಥಳಾಂತರ, ಸಂತಾನಹರಣ ಶಸ್ತç ಚಿಕಿತ್ಸೆ, ಆಶ್ರಯತಾಣ, ಮತ್ತಿತರ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಬೀದಿ ನಾಯಿಗಳ ನಿಯಂತ್ರಣ ಕುರಿತು ಸ್ಥಾಪಿಸಲಾದ ಸಹಾಯವಾಣಿಯಲ್ಲಿ ದಾಖಲಾಗುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿನಾಯಿ ಹಿಡಿಯುವ ಸಿಬ್ಬಂದಿಗಳನ್ನು ತರಬೇತಿ ನೀಡಿ ನಿಯೋಜಿಸಬೇಕು. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚು ನಾಯಿ ಕಡಿತ ಪ್ರಕರಣಗಳಾದರೂ ಸಹ 2026 ರ ಮಾರ್ಚ್ ನಿಂದ ಈವರೆಗೆ ಶೂನ್ಯ ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತç ಚಿಕಿತ್ಸೆ ಮಾಡಲಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕೂಡಲೇ ಬೀದಿ ನಾಯಿ ಹಿಡಿಯುವ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮವಹಿಸಬೇಕು ಎಂದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಸಂತಾನಹರಣ ಶಸ್ತ್ರ ಚಿಕಿತ್ಸೆ, ಎ.ಆರ್.ವಿ ಲಸಿಕೆ ನೀಡುವುದರೊಂದಿಗೆ ಅವುಗಳನ್ನು ಆಕರ್ಷಣೀಯವಾಗಿ ಕಾಣುವಂತೆ ಮಾಡಬೇಕು. ಶ್ವಾನ ಪ್ರದರ್ಶನ, ದತ್ತು ಸ್ವೀಕಾರ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ನಾಯಿಗಳನ್ನು ಸಾರ್ವಜನಿಕರು ದತ್ತು ಪಡೆಯುವಂತೆ ಪ್ರೇರೇಪಿಸಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.