ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ರಸ್ತೆ ಡಿವೈಡರ್‌ಗಳ ಮೇಲೆ ಅಳವಡಿಸಲಾಗಿರುವ ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಸೂಚನೆ ನೀಡಿದ್ದಾರೆ.
ಮಳೆಗಾಲದಲ್ಲಿ ಬಿರುಗಾಳಿ ಹಾಗೂ ಮಳೆಯ ಪರಿಣಾಮದಿಂದ ರಸ್ತೆ ಡಿವೈಡರ್‌ಗಳಿಗೆ ಅಳವಡಿಸಲಾದ ಫ್ಲೆಕ್ಸ್, ಬ್ಯಾನರ್‌ಗಳು ಕಳಚಿ ವಾಹನಗಳು ಹಾಗೂ ಪಾದಚಾರಿಗಳ ಮೇಲೆ ಬೀಳುವ ಸಾಧ್ಯತೆ ಇದ್ದು, ಇದರಿಂದ ಅಪಘಾತಗಳು ಹಾಗೂ ಜೀವಹಾನಿ ಸಂಭವಿಸುವ ಅಪಾಯವಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳ ಡಿವೈಡರ್‌ಗಳ ಮೇಲೆ ಅನಧಿಕೃತ ಹಾಗೂ ಅಪಾಯಕಾರಿ ರೀತಿಯಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ. ಇದರಿಂದ ವಾಹನ ಸವಾರರು ಮತ್ತು ರಸ್ತೆ ದಾಟುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೆಲವೆಡೆ ಅಪಘಾತಗಳಿಗೂ ಕಾರಣವಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಕುರಿತು ಜಿಲ್ಲಾಡಳಿತಕ್ಕೆ ಈಗಾಗಲೇ ಹಲವಾರು ದೂರುಗಳು ಬಂದಿದ್ದು, ರಸ್ತೆ ಸುರಕ್ಷತಾ ಸಮಿತಿಯ ಸಭೆಯಲ್ಲಿಯೂ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗಿದೆ. ಹೀಗಾಗಿ ಸಂಬಂಧಪಟ್ಟ ಸಂಸ್ಥೆಗಳು ಮತ್ತು ವ್ಯಕ್ತಿಗಳು ಕೂಡಲೇ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಬೇಕು. ಆದೇಶ ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.















