ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ತನ್ನ ಹೆಸರು ಪ್ರಸ್ತಾಪವಾಗುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ Prakash Raj ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಗಾಳಿಸುದ್ದಿಗಳನ್ನು ನಂಬದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಗ್ಗೆ ಕೆಲವು ಸುದ್ದಿಗಳು ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮ ಹಾಗೂ ಕೋಟ್ಯಂತರ ಭಕ್ತರ ನಂಬಿಕೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಈ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಪ್ರಸ್ತುತ ತಾವು ದೂರದ ಊರಿನಲ್ಲಿ ಇದ್ದು, ಇನ್ನೆರಡು ದಿನಗಳಲ್ಲಿ ಸ್ವತಃ ಮಾಧ್ಯಮಗಳ ಮುಂದೆ ಬಂದು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲಿಯವರೆಗೆ “ಗಾಳಿಮಾತುಗಳನ್ನು ಹಾಗೂ ಕೆಲವು ದುರುಳರು ಈ ಸುದ್ದಿಗೆ ಕಟ್ಟುತ್ತಿರುವ ರೆಕ್ಕೆ-ಪುಕ್ಕಗಳನ್ನು ನಂಬಬೇಡಿ” ಎಂದು ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಿ.ಎನ್. ಚಿನ್ನ ಅಲಿಯಾಸ್ ಚಿನ್ನಯ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಪ್ರಕಾಶ್ ರಾಜ್ ಅವರ ಹೆಸರೂ ಉಲ್ಲೇಖವಾಗಿರುವ ಹಿನ್ನೆಲೆ ನಟ ಈ ಸ್ಪಷ್ಟನೆ ನೀಡಿದ್ದಾರೆ.















