ದಾವಣಗೆರೆ: ಜಿಮ್ನಲ್ಲಿ ತರಬೇತಿ ಮುಗಿಸಿಕೊಂಡು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಕೆಟಿಜೆ ನಗರದ ನಿವಾಸಿ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಜ್ಜಾಗುತ್ತಿದ್ದ 26 ವರ್ಷದ ಸುಶೀಲ್ ಕುಮಾರ್ ಮೃತಪಟ್ಟವರು.
ಮಂಗಳವಾರ ರಾತ್ರಿ ಸುಮಾರು 8.30ರ ವೇಳೆಗೆ ಜಿಮ್ನಿಂದ ಮನೆಗೆ ಬಂದಿದ್ದ ಸುಶೀಲ್ ಕುಮಾರ್ ಅವರಿಗೆ ತಲೆ ಸುತ್ತುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಮಾರ್ಗ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋ ಬಿಪಿ ಹಿನ್ನೆಲೆಯಲ್ಲಿ ಹೃದಯಾಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ನಿಖರ ಸಾವಿನ ಕಾರಣ ವೈದ್ಯಕೀಯ ಪರೀಕ್ಷೆಯ ವರದಿಯ ಬಳಿಕವೇ ತಿಳಿದುಬರಬೇಕಿದೆ.
ಸುಶೀಲ್ ಕುಮಾರ್ ಅವರು ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿದ್ದರು. ತಮ್ಮೊಂದಿಗೆ ತರಬೇತಿ ಪಡೆಯುತ್ತಿದ್ದ ಯುವಕರು ಸಾಧನೆ ಮಾಡಬೇಕು, ತಮಗಿಂತಲೂ ಎತ್ತರಕ್ಕೆ ಬೆಳೆಯಬೇಕು ಎಂಬ ಆಶಯದಿಂದ ಹತ್ತಾರು ಯುವಕರಿಗೆ ನಿತ್ಯ ತರಬೇತಿ ನೀಡುತ್ತಿದ್ದರು.
ಯುವ ವಯಸ್ಸಿನಲ್ಲೇ ಭರವಸೆಯ ಕ್ರೀಡಾಪಟುವನ್ನು ಕಳೆದುಕೊಂಡಿರುವುದು ಕುಟುಂಬಸ್ಥರು, ಸ್ನೇಹಿತರು ಹಾಗೂ ಕ್ರೀಡಾ ವಲಯದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಸುಶೀಲ್ ನಿವಾಸದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.















