ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯ ದುರ್ಬಳಕೆಯನ್ನು ತಡೆಯಲು ಸಾರಿಗೆ ಇಲಾಖೆ ಹೊಸ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಬೇರೆ ರಾಜ್ಯಗಳ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿರುವ ಆರೋಪಗಳ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಹೊಸ ವ್ಯವಸ್ಥೆಯಡಿ ಕರ್ನಾಟಕದ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಹೊಂದಿರುವ ಮಹಿಳೆಯರು ಹಾಗೂ ತೃತೀಯ ಲಿಂಗಿಗಳು ಮಾತ್ರ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಹರಾಗಲಿದ್ದಾರೆ. ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ ಹಾಗೂ ವಿಳಾಸದ ವಿವರಗಳಿದ್ದು, ಇತರರಿಗೆ ವರ್ಗಾಯಿಸಲು ಅವಕಾಶ ಇರುವುದಿಲ್ಲ.
ಪ್ರಾಯೋಗಿಕವಾಗಿ ಈ ಯೋಜನೆಯನ್ನು ಮೊದಲು ಬಿಎಂಟಿಸಿಯಲ್ಲಿ ಜಾರಿಗೊಳಿಸಲಾಗುವುದು. ಎನ್‌ಎಫ್‌ಸಿ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ಕಾರ್ಡ್‌ಗಳನ್ನು ಬಸ್‌ಗಳ ಜೊತೆಗೆ ‘ನಮ್ಮ ಮೆಟ್ರೋ’ ಪ್ರಯಾಣಕ್ಕೂ ಬಳಸಬಹುದಾಗಿದೆ. ರಾಜ್ಯಾದ್ಯಂತ ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಗುರಿ ಸರ್ಕಾರ ಹೊಂದಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಸೈಬರ್ ಸೆಂಟರ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯಬಹುದಾಗಿದೆ. ಪ್ರಮುಖ ಬಸ್ ನಿಲ್ದಾಣಗಳಲ್ಲೂ ವಿತರಣಾ ಕೌಂಟರ್‌ಗಳನ್ನು ತೆರೆಯುವ ಯೋಜನೆ ಇದೆ.

















