ಕೋಟ ಸರ್ಕಲ್‌ನಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್‌ನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ (45) ಎಂದು ಗುರುತಿಸಲಾಗಿದೆ.

ಸತೀಶ್ ಆಚಾರ್ ಅವರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಾಡಿಕೆರೆ ಕಡೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಸತೀಶ್ ಆಚಾರ್ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಸತೀಶ್ ಆಚಾರ್ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದು, ಪರೀಕ್ಷಿಸಿದ ವೈದ್ಯರು ಸತೀಶ್ ಆಚಾರ್ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೋಟ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾ ದಲ್ಲಿ ಸರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗುತ್ತಿದೆ.