ಉಡುಪಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯು ಅತ್ಯಂತ ಸವಾಲಿನ ಕಾರ್ಯನಿರ್ವಹಣಾ ಶೈಲಿಯನ್ನು ಹೊಂದಿದ್ದು, ಹೆಚ್ಚಿನ ಒತ್ತಡವನ್ನು ಹೊಂದಿರುವುದರಿಂದ ನಿರ್ವಹಣಾ ಕೌಶಲ್ಯವನ್ನು ಬೆಳೆಸಿಕೊಳ್ಳುವುದರೊಂದಿಗೆ ಸಂಘಟಿತವಾಗಿ ಕಾರ್ಯದಕ್ಷತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕರೆ ನೀಡಿದರು.
ಅವರು ಮಣಿಪಾಲದ ಟಿ ಟ್ರೀ ಹೋಟೆಲ್‌ನ ಸಭಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಕ್ತಿಯುತ ಸಂಘಟನೆಯನ್ನು ಹೊಂದಿದ್ದಲ್ಲಿ ಕಾರ್ಯನಿರ್ವಹಣೆಯು ಸುಲಭವಾಗಿರುವುದರಿಂದ, ನಾಗರೀಕರ ನಾಡಿಮಿಡಿತವನ್ನು ಅರಿತು ಅಶೋತ್ತರಗಳಿಗೆ ಸ್ಪಂದಿಸುವ ಹೊಣೆಗಾರಿಕೆಯೂ ನಮ್ಮ ಮೇಲಿದೆ. ಕೌಟುಂಬಿಕ ಸಮಯಕ್ಕೂ ಒತ್ತು ನೀಡುವಂತೆ ತಿಳಿ ಹೇಳಿದ ಅವರು, ಉಡುಪಿ ಜಿಲ್ಲೆಯ ಪಂಚಾಯತ್ ಗಳು ರಾಷ್ಟ್ರಮಟ್ಟದ ಪುರಸ್ಕಾರ ಪಡೆಯುವ ನಿಟ್ಟಿನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಅಭಿನಂದನೀಯವಾದದ್ದು ಎಂದು ಪ್ರಶಂಶಿಸಿದರು.
ಉಡುಪಿ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಪಿ.ಡಿ.ಒ ಗಳ ಪಾತ್ರ ಬಹುಮುಖ್ಯವಾಗಿದ್ದು, ಉಡುಪಿ ಜಿಲ್ಲೆಯ ಪಂಚಾಯತ್ ರಾಜ್ ವ್ಯವಸ್ಥೆ ಕೇಂದ್ರ ಸರ್ಕಾರದ ಪುರಸ್ಕಾರ ಪಡೆದಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಹೆಸರಾಂತ ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕ್ರಿಯಾಶೀಲರಾಗಿದ್ದು, ಹೊಸತನದ ಕಾರ್ಯ ಚಟುವಟಿಕೆಗಳನ್ನು ಅನುಷ್ಠಾನ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು.
ಪಿ.ಡಿ.ಓ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ದಯಾನಂದ ಬೆನ್ನೂರು ಮಾತನಾಡಿ, ಸ್ವಚ್ಛತೆ, ಯೋಜನಾ ಅನುಷ್ಠಾನ, ಮೂಲಸೌಕರ್ಯ ಸುಧಾರಣೆಯಂತಹ ಕಾರ್ಯಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪಿ.ಡಿ.ಒ.ಗಳು ನಿರಂತರವಾಗಿ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆರೋಗ್ಯ ರಕ್ಷಣೆ ಹಾಗೂ ಒತ್ತಡ ನಿರ್ವಹಣಾ ಕಾರ್ಯಗಾರದಂತಹ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ನಿವೃತ್ತಿ ಹೊಂದಿದ ತಾ.ಪಂ ಅಧಿಕಾರಿ ಇಬ್ರಾಹಿಂಪುರ. ನಿಕಟ ಪೂರ್ವ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ ಹಾಗೂ ನಿಕಟಪೂರ್ವ ರಾಜ್ಯ ಪರಿಷತ್ ಸದಸ್ಯ ಸಿದ್ದೇಶ್ ಅವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ನಿವೃತ್ತರಾದ ಹಾಗೂ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಹೊಂದಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮಕ್ಕಳಿಗೆ ಅಭಿನಂದನೆ ಹಾಗೂ ಶೈಕ್ಷಣಿಕ ಸಾಧಕರಿಗೆ ಪ್ರತಿಭಾ ಪುರಸ್ಕಾರವನ್ನು ಈ ಸಂದರ್ಭದಲ್ಲಿ ಜರುಗಿಸಲಾಯಿತು.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಮೋಹನ್ ಶೆಟ್ಟಿ, ಪ್ರಿಯಾ ಅಸೋಸಿಯೇಟ್ಸ್ನ ಉದ್ಯಮಿ ಅಕ್ಷತ್ ರಾಜ್, ಸಂಘದ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು.
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂತೋಷ್ ಜೋಗಿ ಪ್ರಾಸ್ತಾವಿಕವಾಗಿ ಮಾತಣಾಡಿದರು. ಹರೀಶ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಮಹೇಶ್.ಕೆ ನಿರೂಪಿಸಿ, ಅನಂತ ಪದ್ಮನಾಭ ನಾಯಕ್ ವಂದಿಸಿದರು.

















