ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಒಳ್ಳೆ ಸುದ್ದಿ:72,186 ಹುದ್ದೆಗಳ ಭರ್ತಿಗೆ ರಾಜ್ಯ ಸರಕಾರ ಅನುಮೋದನೆ

ಬೆಂಗಳೂರು: ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಲು ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 72,186 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ.

2023-24ನೇ ಸಾಲಿನಿಂದ ಇದುವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿದೆ. ಜೊತೆಗೆ, ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80ರಷ್ಟು ಹುದ್ದೆಗಳ ಭರ್ತಿಗೂ ಅನುಮೋದನೆ ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಆಯ್ಕೆ ಪ್ರಾಧಿಕಾರಗಳಿಂದ ಕ್ರಿಯಾ ಯೋಜನೆಗಳನ್ನು ಪಡೆದು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ. ಅದರಂತೆ, ಮುಂದಿನ ಎರಡು ತಿಂಗಳೊಳಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿ, ನಾಲ್ಕು ತಿಂಗಳೊಳಗೆ ನೇಮಕಾತಿ ಪರೀಕ್ಷೆಗಳನ್ನು ನಡೆಸಿ, ಒಟ್ಟು ಆರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಆದೇಶ ಹೊರಡಿಸುವಂತೆ ಸರ್ಕಾರ ಸೂಚಿಸಿದೆ.

ಇದೇ ವೇಳೆ, 17 ಇಲಾಖೆಗಳ ನೇರ ನೇಮಕಾತಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಜವಾಬ್ದಾರಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ವಹಿಸಲಾಗಿದೆ. ಉಳಿದ 34 ಇಲಾಖೆಗಳ ನೇರ ನೇಮಕಾತಿ ಹುದ್ದೆಗಳ ಭರ್ತಿಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆ ವಿಳಂಬವಾಗದಂತೆ ಕಟ್ಟುನಿಟ್ಟಿನ ವೇಳಾಪಟ್ಟಿಯನ್ನು ಅನುಸರಿಸುವಂತೆ ಸಂಬಂಧಿತ ಇಲಾಖೆಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.