ಇನ್‌ಸ್ಟಾಗ್ರಾಂಗೆ ಕೇಂದ್ರ ಸರ್ಕಾರದ ಶಾಕ್ :ಇನ್ಮುಂದೆ ಈ ರೀತಿಯ ರೀಲ್ಸ್ ಹಾಕುವಂತಿಲ್ಲ!

ನವದೆಹಲಿ: ಮಕ್ಕಳ ಲೈಂಗಿಕ ಶೋಷಣೆ ಹಾಗೂ ದೌರ್ಜನ್ಯಕ್ಕೆ (CSAM/CSEAM) ಸಂಬಂಧಿಸಿದ ವಿಷಯಗಳು ಮತ್ತು ಅವುಗಳನ್ನು ಉತ್ತೇಜಿಸುವ ಜಾಹೀರಾತುಗಳನ್ನು ತಕ್ಷಣವೇ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಮೆಟಾ (ಇನ್‌ಸ್ಟಾಗ್ರಾಂ)ಗೆ ನಿರ್ದೇಶನ ನೀಡಿದೆ. ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಏಳು ದಿನಗಳೊಳಗೆ ಸ್ಪಷ್ಟೀಕರಣ ನೀಡುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನೋಟಿಸ್ ಜಾರಿ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಂನಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಷಯಗಳು ಹಾಗೂ ಜಾಹೀರಾತುಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ವರದಿಗಳ ಪ್ರಕಾರ, ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರ ನಿರ್ದೇಶನದ ಮೇರೆಗೆ ಹಿರಿಯ ಅಧಿಕಾರಿಗಳು ಮೆಟಾಗೆ ನೋಟಿಸ್ ನೀಡಿದ್ದಾರೆ. ಮಕ್ಕಳ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ವಿಷಯಕ್ಕೆ ವೇದಿಕೆಯಲ್ಲಿ ಅವಕಾಶ ನೀಡಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೆಟಾ, ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತನ್ನ ವೇದಿಕೆಯಲ್ಲಿ ಅನುಮತಿಸುವುದಿಲ್ಲ ಎಂದು ಹೇಳಿದೆ. ಇಂತಹ ವಿಷಯಗಳನ್ನು ಪತ್ತೆಹಚ್ಚಿ ತೆಗೆದುಹಾಕಲು ಅತ್ಯಾಧುನಿಕ ತಂತ್ರಜ್ಞಾನ ಬಳಸಲಾಗುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

ಈ ಕ್ರಮಕ್ಕೆ ಕಾರಣವಾದ ಪ್ರಮುಖ ಅಂಶವೆಂದರೆ, ಇತ್ತೀಚೆಗೆ ಪ್ರಕಟವಾದ ತನಿಖಾ ವರದಿಯೊಂದು ಇನ್‌ಸ್ಟಾಗ್ರಾಂನಲ್ಲಿ ಕೆಲವು ಪಾವತಿಸಿದ ಜಾಹೀರಾತುಗಳು ಬಳಕೆದಾರರನ್ನು ಟೆಲಿಗ್ರಾಮ್ ಚಾನೆಲ್‌ಗಳಿಗೆ ಕರೆದೊಯ್ಯುತ್ತಿದ್ದು, ಅಲ್ಲಿ ಅಕ್ರಮ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಷಯಗಳನ್ನು ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಬಹಿರಂಗಪಡಿಸಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೆಟಾದಿಂದ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಕಂಪನಿಯ ಉತ್ತರದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.