ಜುಲೈ 8ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 8 (ಬುಧವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದ್ದು, ರಜೆ ಘೋಷಿಸಿರುವ ದಿನ ಯಾವುದೇ ತರಗತಿಗಳನ್ನು ನಡೆಸದಂತೆ ಸೂಚಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯ ಹಿನ್ನೆಲೆ ಪಾಲಕರು ಮಕ್ಕಳನ್ನು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.