ಉಡುಪಿ: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರ ಪರಿಣಾಮಕಾರಿ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ ಎಂದು ಕೆಆರ್‌ಎಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ ವಿ.ಆರ್. ಮರಾಠೆ ಆರೋಪಿಸಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿ ಆರಂಭಿಸುವುದಾಗಿ ಘೋಷಿಸಿದ್ದರೂ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಟೀಕಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಲು ವರ್ಗಾವಣೆ ದಂಧೆಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಹಣ ನೀಡಿ ಆಯಕಟ್ಟಿನ ಸ್ಥಳಗಳಿಗೆ ವರ್ಗಾವಣೆ ಪಡೆಯುತ್ತಿರುವುದು ಹಾಗೂ ಕೆಳಹಂತದ ಸಿಬ್ಬಂದಿ ವರ್ಷಗಳ ಕಾಲ ಒಂದೇ ಸ್ಥಳದಲ್ಲಿ ಮುಂದುವರಿಯುತ್ತಿರುವುದು ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರು.
ಕಾರ್ಕಳ ತಾಲ್ಲೂಕು ಕಚೇರಿಯಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಐದು ವರ್ಷಗಳಿಗಿಂತ ಹೆಚ್ಚು ಅವಧಿಯಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲವರು 20 ವರ್ಷಕ್ಕೂ ಅಧಿಕ ಕಾಲ ಅದೇ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತದ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು.
ಈ ಸಂಬಂಧ 2026ರ ಮಾರ್ಚ್ 13ರಂದು ಜಿಲ್ಲಾಡಳಿತಕ್ಕೆ ಪತ್ರ ಬರೆದು, ಐದು ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ, ‘ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಸಾಧ್ಯವಿಲ್ಲ’ ಎಂಬ ಉತ್ತರ ನೀಡಲಾಗಿದೆ ಎಂದು ತಿಳಿಸಿದರು.
ಯಾವ ಹಿತದೃಷ್ಟಿಯಿಂದ ವರ್ಗಾವಣೆ ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿಲ್ಲ. ಜನರ ಕೆಲಸಗಳಿಗೆ ವಿಳಂಬ, ಭ್ರಷ್ಟಾಚಾರ ಹಾಗೂ ಅಕ್ರಮಗಳಿಗೆ ಅವಕಾಶ ಕಲ್ಪಿಸುವುದೇ ಆಡಳಿತಾತ್ಮಕ ಹಿತದೃಷ್ಟಿಯೇ ಎಂದು ಪ್ರಶ್ನಿಸಿದ ಅವರು, ಸರ್ಕಾರ ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಜೇಶ್ ಕೆ.ವಿ., ಪದಾಧಿಕಾರಿಗಳಾದ ಹಬೀಬ್ ಸಾಹೇಬ್, ಸಂತೋಷ್, ಶೋಭಾ ಶಂಕರಪ್ಪ ಉಪಸ್ಥಿತರಿದ್ದರು.















