ವಿಶ್ವವಿಖ್ಯಾತ ನಾಡಹಬ್ಬ ದಸರಾ ವೇಳಾಪಟ್ಟಿ ರೆಡಿ, ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಚರ್ಚೆ

ಬೆಂಗಳೂರು: 2026ರ ನಾಡಹಬ್ಬ ಮೈಸೂರು ದಸರಾವನ್ನು ಅದ್ಧೂರಿಯಾಗಿ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಸಭೆಯಲ್ಲಿ ದಸರಾ ಮಹೋತ್ಸವದ ರೂಪುರೇಷೆ, ಗಜಪಯಣ, ದಸರಾ ಉದ್ಘಾಟನೆ, ಜಂಬೂ ಸವಾರಿ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ನಿರ್ಧರಿಸಿದಂತೆ, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಬಳಿಕ 10 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿವೆ.

ಅಕ್ಟೋಬರ್ 21ರಂದು ಮಧ್ಯಾಹ್ನ 4.10ಕ್ಕೆ ಮೀನಾ ಲಗ್ನದಲ್ಲಿ ಐತಿಹಾಸಿಕ ಜಂಬೂ ಸವಾರಿ ಆರಂಭವಾಗಲಿದೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿರುವ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತ ಗಜಪಡೆ ಸುಮಾರು 5 ಕಿಲೋಮೀಟರ್ ದೂರದ ಬನ್ನಿಮಂಟಪದವರೆಗೆ ಮೆರವಣಿಗೆಯಲ್ಲಿ ಸಾಗಲಿದ್ದು, ಅದರೊಂದಿಗೆ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು. ಎರಡು ದಿನಗಳ ಕಾಲ ಕಂಬಳ ಸ್ಪರ್ಧೆ ನಡೆಸಲು ಕಂಬಳ ಸಮಿತಿಯಿಂದ ಮನವಿ ಸಲ್ಲಿಸಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಅನುದಾನ ನೀಡುವಂತೆ ಸರ್ಕಾರವನ್ನು ಕೋರಲಾಗಿದೆ.

ಇದೇ ವೇಳೆ, ದಸರಾ ಉದ್ಘಾಟಕರ ಆಯ್ಕೆ ಕುರಿತು ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ದಿನಗಳಲ್ಲಿ ಪ್ರಕಟಿಸಲಿದ್ದಾರೆ. ಅಲ್ಲದೆ, 2026ರ ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ ಸರ್ಕಾರ ₹45 ಕೋಟಿ ಅನುದಾಬಿಡುಗಡೆ ಮಾಡಲು ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.