ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್ನಲ್ಲೇ ಗುಪ್ತಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಖಾಸಗಿ ಬಸ್ ನಿರ್ವಾಹಕನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿಯ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ ಆರೋಪಿ.
ಪೊಲೀಸರ ಮಾಹಿತಿ ಪ್ರಕಾರ, ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಸೆಲಿನಾ ಬಸ್ನಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಇರ್ಫಾನ್, ಜುಲೈ 9ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಬಸ್ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಆರೋಪಿ ವಿದ್ಯಾರ್ಥಿನಿಯರ ಎದುರೇ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿದ್ದಲ್ಲದೆ, ಅಸಭ್ಯ ಸನ್ನೆ ಮಾಡಿ ಬಸ್ನ ಹಿಂದಿನ ಸೀಟಿನತ್ತ ಬರುವಂತೆ ಸೂಚನೆ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆಯಿಂದ ಆತಂಕಗೊಂಡ ವಿದ್ಯಾರ್ಥಿನಿಯರು ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಕರಣದ ಸಂಬಂಧ ಜುಲೈ 10ರಂದು ಆರೋಪಿಯನ್ನು ಬಂಧಿಸಿರುವ ಪೊಲೀಸರು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.















