ಬೆಂಗಳೂರು: ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಆದೇಶ ಹೊರಡಿಸಿದ್ದಾರೆ.
ಮುಂದಿನ ಆದೇಶದವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ಅವರು ತಮ್ಮ ಪುತ್ರಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಆಯ್ಕೆಯಾಗಲು ಅನುಕೂಲವಾಗುವಂತೆ ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರದಲ್ಲಿ ಕಡಿಮೆ ಆದಾಯ ನಮೂದಿಸಿ ತಿರುಚಲು ಸಹಕರಿಸಿದ್ದರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಆರೋಪಗಳ ಹಿನ್ನೆಲೆ ರಾಜ್ಯಪಾಲರು ಅಮಾನತು ಆದೇಶ ಹೊರಡಿಸಿದ್ದಾರೆ.















