ಭಾರೀ ಮಳೆ: ಜುಲೈ 18ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಂದು (ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ವಸತಿ ಪಿಯು ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಆದೇಶ ಹೊರಡಿಸಿದೆ.

ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿತೀರ, ಸಮುದ್ರತೀರ ಮತ್ತು ನೀರು ತುಂಬಿರುವ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚಿಸಿದೆ.

ಪಾಲಕರು ಮಕ್ಕಳನ್ನು ಕೆರೆ, ನದಿ ಹಾಗೂ ಸಮುದ್ರ ತೀರದ ಪ್ರದೇಶಗಳಿಗೆ ಬಿಡದಂತೆ ಮನವಿ ಮಾಡಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಉಳಿದು ವಿಪತ್ತು ನಿರ್ವಹಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ನಿರ್ದೇಶಿಸಲಾಗಿದೆ.

ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.