‘ನಮ್ಮ ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವವರು ನೀವೇ’: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ಪ್ರಧಾನಿ ಮೋದಿ ಅವರು ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿರುವುದಷ್ಟೇ ಅಲ್ಲ, ಅದನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಿ ಶೀಘ್ರ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಇಂದು ಘೋಷಿಸಿದ್ದಾರೆ. ಅದಕ್ಕೆ ತಮ್ಮ ಎಕ್ಸ್‌ ಪೋಸ್ಟ್‌ ನಲ್ಲಿ ಪ್ರತಿಕ್ರಿಯಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವುದು ನೀವೇ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿರುವುದಷ್ಟೇ ಅಲ್ಲ, ಅದನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಲ್ಲದೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ರಾಹುಲ್ ಗಾಂಧಿ ಏನು ಹೇಳಿದ್ದಾರೆ?

ಪ್ರಧಾನಿಯವರಂತೆ ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ನಮ್ಮ ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವವರು ನೀವೇ, ನೀವು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲು ಮತ್ತು ಅದನ್ನು ಹಾಳು ಮಾಡಲು ಅವಕಾಶ ನೀಡಿದ್ದೀರಿ. ಅಷ್ಟೇ ಅಲ್ಲ, ಅದನ್ನು ಪ್ರೋತ್ಸಾಹಿಸಿ, ಇದಕ್ಕೆ ಹೊಣೆಗಾರರಾದ ಪ್ರತಿಯೊಬ್ಬರಿಗೂ ರಕ್ಷಣೆ ನೀಡಿದ್ದೀರಿ,” ಎಂದು ಟೀಕಿಸಿದ್ದಾರೆ.

ಇದೇ ವೇಳೆ, ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟವಾಗಿವೆ — ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ವಿದ್ಯಾರ್ಥಿಗಳ ಕ್ಷಮೆ ಯಾಚಿಸಿ ಹಾಗೂ ವಿದ್ಯಾರ್ಥಿಗಳ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಹುಲ್ ಗಾಂಧಿ ಪ್ರಧಾನ ಮಂತ್ರಿಗಳಿಗೆ ಆಗ್ರಹಿಸಿದ್ದಾರೆ.