ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಮೂರನೇ ಸುತ್ತಿನ ಸಭೆಗೂ ಮುನ್ನ ಕಾಕ್ರೋಚ್ ಜನತಾ ಪಕ್ಷದ (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಭೆಗೂ ಮುನ್ನ ಮಾತನಾಡಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಸರ್ಕಾರದೊಂದಿಗೆ ನಡೆಯುವ ಸಭೆಗಳಿಗೆ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಇದೇ ಧೋರಣೆ ಮುಂದುವರಿಸಿದರೆ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಿ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಯ 47 ಅಧಿಕಾರಿಗಳನ್ನು ವಜಾಗೊಳಿಸಿರುವುದಷ್ಟೇ ಸಾಕಾಗುವುದಿಲ್ಲ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಸಂಪೂರ್ಣ ಹೊಣೆ ಶಿಕ್ಷಣ ಸಚಿವರ ಮೇಲಿದೆ ಎಂದು ಆರೋಪಿಸಿದ ಅವರು, ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಲು ಅಗತ್ಯವಿರುವ ಬೇಡಿಕೆಗಳ ಪಟ್ಟಿಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಶುತೋಷ್ ರಂಕಾ ತಿಳಿಸಿದ್ದಾರೆ.
ಇದೇ ವೇಳೆ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸಿಜೆಪಿ ಪ್ರತಿನಿಧಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ಮೂರು ಪ್ರಮುಖ ಬೇಡಿಕೆಗಳು ಹಾಗೂ ಐದು ಸುಧಾರಣಾ ಸಲಹೆಗಳನ್ನು ಮಂಡಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರದೊಂದಿಗೆ ನಡೆದ ಚರ್ಚೆಯ ವಿವರಗಳನ್ನು ಸದಸ್ಯರಿಗೆ ತಿಳಿಸಲು ಶನಿವಾರ ಮತ್ತೊಮ್ಮೆ ಸಿಜೆಪಿ ಸಭೆ ನಡೆಯಲಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.















