ಬ್ರಹ್ಮಾವರ: ಬ್ರಹ್ಮಾವರದ ಎಸ್ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಸ್ವಚ್ಛತಾ ಜಾಗೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮಹಿಳಾ ವೇದಿಕೆಯ (Women’s Forum) ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಐವಾನ್ ಡೊನಾತ್ ಸುವಾರಿಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯ ನವಜಾತ ಶಿಶು ಮತ್ತು ಮಕ್ಕಳ ತಜ್ಞ ವೈದ್ಯರಾದ ಡಾ. ಜೋಸ್ನಿ ಟೆಲ್ಲಿಸ್ ಅವರು ಮಹಿಳೆಯರ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರದ ಮಹತ್ವ ಹಾಗೂ ಮಾನಸಿಕ ಆರೋಗ್ಯದ ಕುರಿತು ವಿದ್ಯಾರ್ಥಿನಿಯರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಉತ್ತಮ ಆರೋಗ್ಯ ಮತ್ತು ಸ್ವಚ್ಛತೆ ಉತ್ತಮ ಜೀವನದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮಹಿಳಾ ಸಬಲೀಕರಣ, ನಾಯಕತ್ವ, ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿಗಳ ಕುರಿತು ಮಾತನಾಡಿದ ಅವರು, ಮಹಿಳೆಯರು ಆತ್ಮವಿಶ್ವಾಸದಿಂದ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆಯಬೇಕು ಎಂದು ಕರೆ ನೀಡಿದರು.
ಮಹಿಳಾ ವೇದಿಕೆಯ ಸಂಚಾಲಕಿಯಾಗಿ ಶ್ರೀಮತಿ ಉಮಾ ಕಾರ್ಯನಿರ್ವಹಿಸಲಿದ್ದು, ವಿದ್ಯಾರ್ಥಿ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ಆಯಿಷಾ ರುಫೈದಾ ಹಾಗೂ ಕಾರ್ಯದರ್ಶಿಯಾಗಿ ನೂರ್ ಜುಹಾ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಹಿಳಾ ಆರೋಗ್ಯ, ವೈಯಕ್ತಿಕ ನೈರ್ಮಲ್ಯ, ಪೌಷ್ಟಿಕ ಆಹಾರ, ಸ್ವಚ್ಛ ಪರಿಸರ ಮತ್ತು ಆರೋಗ್ಯಕರ ಜೀವನಶೈಲಿಯ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
“ಸಬಲ ಮಹಿಳೆಯರು, ಸಬಲ ಜಗತ್ತು” ಎಂಬ ಧ್ಯೇಯವಾಕ್ಯದೊಂದಿಗೆ ಆರಂಭಗೊಂಡ ಈ ಮಹಿಳಾ ವೇದಿಕೆಯು ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನ, ಆರೋಗ್ಯ ಜಾಗೃತಿ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಉತ್ತಮ ವೇದಿಕೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.















