ಅಗಸ್ಟ್ 3 ರಂದು ಕೊಪ್ಪ, ಶೃಂಗೇರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೆಲ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಆ.3) ರಜೆ ಘೋಷಿಸಲಾಗಿದೆ.

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆಯಿಂದಾಗಿ ತುಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿದೆ.

ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಮತ್ತು ಪ್ರವಾಸಿಗರು ಯಾವುದೇ ಕಾರಣಕ್ಕೂ ನದಿ ತೀರಕ್ಕೆ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.