ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ ಅವರನ್ನು ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಯಿಂದ ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) 2023ರ ಕಲಂ 163ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ. ಅದರಂತೆ ಆಗಸ್ಟ್ 14ರಿಂದ ನವೆಂಬರ್ 13ರವರೆಗೆ ಮೂರು ತಿಂಗಳ ಅವಧಿಗೆ ಪುನೀತ್ ಅತ್ತಾವರ ಅವರು ಉಡುಪಿ ಜಿಲ್ಲೆಯ ಯಾವುದೇ ಪ್ರದೇಶಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ.

ನಿರ್ಬಂಧದ ಆದೇಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 13ರ ಮಧ್ಯಾಹ್ನ 12 ಗಂಟೆಯೊಳಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಆದೇಶ ಜಾರಿಗೊಳಿಸುವ ಸಿಬ್ಬಂದಿ ಮೂಲಕ ಅಥವಾ ಜಿಲ್ಲಾಧಿಕಾರಿ ಕಚೇರಿಯ ಇ-ಮೇಲ್‌ಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಸ್ವೀಕರಿಸದಿದ್ದಲ್ಲಿ, ಯಾವುದೇ ಹೇಳಿಕೆ ಅಥವಾ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ನಿಯಮಾನುಸಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.