ಉಡುಪಿ: ಖರ್ಗೆ ಭಾಷಣದ ವೇದಿಕೆ ‘ಶುದ್ಧೀಕರಣ’ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಉತ್ತರಾಖಂಡದ ಹಲ್ದವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಸಿಂಪಡಿಸಿ, ಹೋಮ ನಡೆಸಿ ‘ಶುದ್ಧೀಕರಣ’ ಮಾಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.

ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ, ಬಿಜೆಪಿ ಪಕ್ಷದ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ‘ದೇಶವೇ ತಲೆತಗ್ಗಿಸುವ ಕೆಲಸವನ್ನು ಬಿಜೆಪಿ ನಡೆಸಿದೆ. ಕಳೆದ 12 ವರ್ಷಗಳಿಂದ ಸಂವಿಧಾನದ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಎಸ್‌ಐಆರ್‌ ಹೆಸರಿನಲ್ಲಿ ಬಡವರು, ಪರಿಶಿಷ್ಟ ಜಾತಿ–ಪಂಗಡದವರು, ಅಲ್ಪಸಂಖ್ಯಾತರು ಹಾಗೂ ವಲಸೆ ಕಾರ್ಮಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

‘ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಬಿಜೆಪಿ ಒಪ್ಪುತ್ತಿಲ್ಲ. ಅದರ ಬದಲಾಗಿ ಮನುಸ್ಮೃತಿ ಆಧಾರಿತ ಸಂಸ್ಕೃತಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ’ ಎಂದು ಅವರು ದೂರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಶೋಕ್ ಪೂಜಾರಿ, ಜ್ಯೋತಿ ಹೆಬ್ಬಾರ್ ಹಾಗೂ ಗೀತಾ ವಾಗ್ಳೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.