ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ (ಎಳ್ಳಾರೆ) ಅವರು ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಪರ್ಕಳ, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಶುಭಕಾರ್ಯಗಳು, ದೇವಸ್ಥಾನ ಹಾಗೂ ದೈವಸ್ಥಾನಗಳ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾಗಸ್ವರ ವಾದನದ ಮೂಲಕ ಸೇವೆ ಸಲ್ಲಿಸುತ್ತಿದ್ದ ಅವರು, ಉತ್ತಮ ಸ್ಯಾಕ್ಸೊಫೋನ್ ವಾದಕರಾಗಿಯೂ ಗುರುತಿಸಿಕೊಂಡಿದ್ದರು.
ಸಂಗೀತ ಕ್ಷೇತ್ರದಲ್ಲಿ ಅಪಾರ ಶಿಷ್ಯವೃಂದವನ್ನು ಹೊಂದಿದ್ದ ಸುಂದರ ಶೇರಿಗಾರ್ ಅವರು ತಮ್ಮ ಕಲಾ ಸೇವೆಯ ಮೂಲಕ ಜನಮನ್ನಣೆ ಗಳಿಸಿದ್ದರು. ಅವರ ನಿಧನದಿಂದ ಕರಾವಳಿಯ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಮೃತರು ನಾಲ್ಕು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ.















