ಉಡುಪಿ: ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಭಾನುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪಲ್ಲ ಪೂಜೆಯನ್ನೂ ನೆರವೇರಿಸಿದರು.

ಬಳಿಕ ರಥೋತ್ಸವದಲ್ಲಿ ಪಾಲ್ಗೊಂಡ ಅವರು, ಸಂಪ್ರದಾಯದಂತೆ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು.

ಆರಾಧನಾ ಮಹೋತ್ಸವದ ಅಂಗವಾಗಿ ಮಠದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳು ಜರುಗಿದವು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
















