ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ದಾಳಿಯ ಬೆನ್ನಲ್ಲೇ ವಿದೇಶಿ ಹೂಡಿಕೆಗಳಿಗೆ ಸಂಬಂಧಿಸಿದ ಆರೋಪಗಳು ಮುನ್ನೆಲೆಗೆ ಬಂದಿವೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪದ ಕುರಿತು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ವಿದೇಶದಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವ್ಯವಹಾರದಲ್ಲಿ ಭಾರಿ ಮೊತ್ತದ ಹಣ ಹೂಡಿಕೆ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಗಣಿಗಾರಿಕೆ ಕಂಪನಿಗೆ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಸಹೋದರಿ ಲಕ್ಷ್ಮಿ ಅವರು ನಿರ್ದೇಶಕರಾಗಿದ್ದಾರೆ ಎಂಬ ಮಾಹಿತಿ ತನಿಖೆಯ ಸಂದರ್ಭದಲ್ಲಿ ಪರಿಶೀಲನೆಗೆ ಒಳಪಟ್ಟಿದೆ ಎನ್ನಲಾಗಿದೆ.
ಅಕ್ರಮ ಮಾರ್ಗಗಳ ಮೂಲಕ ವಿದೇಶಕ್ಕೆ ಹಣ ವರ್ಗಾವಣೆ ಮಾಡಿ, ಕುಟುಂಬಸ್ಥರ ಹೆಸರಿನಲ್ಲಿ ವಿದೇಶಿ ಕಂಪನಿಗಳನ್ನು ಸ್ಥಾಪಿಸಲಾಗಿದೆ ಎಂಬ ಆರೋಪಗಳ ಬಗ್ಗೆಯೂ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾಳಿ ವೇಳೆ ವಶಪಡಿಸಿಕೊಳ್ಳಲಾದ ದಾಖಲೆಗಳು ಹಾಗೂ ಇತರ ಮಾಹಿತಿಗಳ ಪರಿಶೀಲನೆಯ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಹೊರಬರುವ ಸಾಧ್ಯತೆಯಿದೆ.















