ಮಂಗಳೂರು: ಕೆಲಸದ ನಿಮಿತ್ತ ಪುತ್ತೂರು ಪೇಟೆಗೆ ತೆರಳಲು ಪರಿಚಯಸ್ಥ ಆಟೋ ಚಾಲಕನ ರಿಕ್ಷಾ ಹತ್ತಿದ್ದ ಮಹಿಳೆಯೊಬ್ಬರಿಗೆ ಮಾರ್ಗ ಬದಲಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಆಟೋ ಚಾಲಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಶಕ್ಕೆ ಪಡೆದ ಆರೋಪಿಯನ್ನು ಆಟೋ ಚಾಲಕ ಬಾಲಕೃಷ್ಣ ಎಂದು ಗುರುತಿಸಲಾಗಿದೆ.
ದೂರಿನಲ್ಲಿ ಏನಿದೆ?
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಸೆಪ್ಟೆಂಬರ್ 9ರಂದು ಬೆಳಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಪರಿಚಯಸ್ಥನಾಗಿದ್ದ ಬಾಲಕೃಷ್ಣನ ಆಟೋ ರಿಕ್ಷಾದಲ್ಲಿ ಪುತ್ತೂರು ಪೇಟೆಯತ್ತ ತೆರಳುತ್ತಿದ್ದರು ಎನ್ನಲಾಗಿದೆ.
ಆದರೆ ಮಾರ್ಗಮಧ್ಯೆ ದುರುದ್ದೇಶದಿಂದ ದಾರಿ ಬದಲಿಸಿದ ಚಾಲಕ, ರಿಕ್ಷಾವನ್ನು ಕುರಿಯ ಎಂಬಲ್ಲಿಗೆ ಕೊಂಡೊಯ್ದು ನಿಲ್ಲಿಸಿದ್ದಾನೆ. ಬಳಿಕ ಆಟೋದಲ್ಲಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ಲಿಖಿತ ದೂರಿನ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 74, 75 ಹಾಗೂ 64ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಟೋ ಸಮೇತ ಆರೋಪಿ ವಶಕ್ಕೆ
ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಸಂಟ್ಯಾರ್ ಪರ್ಪುಂಜ ಬಳಿ ಆರೋಪಿ ಬಾಲಕೃಷ್ಣನನ್ನು ಆಟೋ ರಿಕ್ಷಾ ಸಮೇತ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















