ಉಡುಪಿ: ಉಡುಪಿಯ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ, ಬಡವರು ಹಾಗೂ ಅಗತ್ಯವಿರುವವರಿಗೆ ಚಿಕಿತ್ಸೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಡೆಯುತ್ತಿದ್ದ ಹೋರಾಟ ಐದನೇ ದಿನಕ್ಕೆ ಅಂತ್ಯಗೊಂಡಿದೆ.
ಪ್ರತಿಭಟನಾ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿಯವರ ಪರವಾಗಿ ಅಪರ ಜಿಲ್ಲಾಧಿಕಾರಿಯವರು ಆಗಮಿಸಿ, ಆಸ್ಪತ್ರೆಯಲ್ಲಿ ಯಂತ್ರೋಪಕರಣಗಳ ಅಳವಡಿಕೆ ಕಾರ್ಯವನ್ನು ನಾಳೆಯಿಂದಲೇ ಆರಂಭಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ನವೆಂಬರ್ 5ರೊಳಗೆ ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸುವುದಾಗಿ ತಿಳಿಸಿದರು.
ಜಿಲ್ಲಾಡಳಿತ ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಅಪರ ಜಿಲ್ಲಾಧಿಕಾರಿಯವರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಯವರ ಕೈಯಿಂದಲೇ ತಂಪು ಪಾನೀಯ ಸೇವಿಸುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸಲಾಯಿತು.
ಆದರೆ, ಜಿಲ್ಲಾಡಳಿತ ನಿಗದಿಪಡಿಸಿದ ಸಮಯದೊಳಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭವಾಗದಿದ್ದರೆ, ನವೆಂಬರ್ 6ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಪರ ಜಿಲ್ಲಾಧಿಕಾರಿಯವರಿಗೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.















