ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಅನರ್ಹಗೊಳಿಸುವ ಹುನ್ನಾರ: ಐವನ್ ಡಿಸೋಜ ಆರೋಪ

ಉಡುಪಿ: ಕೇಂದ್ರದ ಬಿಜೆಪಿ ಸರ್ಕಾರ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನೈಜ ಮತದಾರರ ಮತದಾನದ ಹಕ್ಕು ಕಸಿಯುವ ಕುತಂತ್ರ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಆರೋಪಿಸಿದರು.

ಉಡುಪಿ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಲ್‌ಒ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ.

ವಿಶೇಷವಾಗಿ ಅಲ್ಪಸಂಖ್ಯಾತರು, ಎಸ್‌ಸಿ, ಎಸ್‌ಟಿ ಹಾಗೂ ದುರ್ಬಲ ವರ್ಗಗಳ ಮತದಾರರನ್ನು ಪಟ್ಟಿಯಿಂದ ಕೈಬಿಡುವಂತೆ ಒತ್ತಡ ಹೇರುತ್ತಿದ್ದು, ಫಾರಂ–7 ಮೂಲಕ ಅರ್ಹ ಮತದಾರರನ್ನೇ ಅನರ್ಹಗೊಳಿಸಲಾಗುತ್ತಿದೆ ಎಂದು ದೂರಿದರು.

‘ಬಾಂಗ್ಲಾ, ಪಾಕಿಸ್ತಾನದ ಮತದಾರರ ಹೆಸರು ತೋರಿಸಲಿ’:

ಬಿಜೆಪಿಗೆ ಬಾಂಗ್ಲಾದೇಶ, ಪಾಕಿಸ್ತಾನದ ಹೆಸರು ಹೇಳದಿದ್ದರೆ ನಿದ್ರೆ ಬರುವುದಿಲ್ಲ. ಅನರ್ಹ ಮತದಾರರು ಹಾಗೂ ವಲಸಿಗರ ಬಗ್ಗೆ ಮಾತನಾಡುವ ಬಿಜೆಪಿಗೆ ಅಷ್ಟು ಧೈರ್ಯವಿದ್ದರೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಮತದಾರರ ಹೆಸರುಗಳನ್ನು ತೋರಿಸಲಿ ಎಂದು ಐವನ್ ಡಿಸೋಜ ಸವಾಲು ಹಾಕಿದರು.

ಚುನಾವಣೆ ಗೆಲ್ಲುವುದಕ್ಕಾಗಿಯೇ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕುಗಳನ್ನು ಕಸಿಯುವ ಪ್ರಯತ್ನವನ್ನು ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಅರ್ಹ ಮತದಾರನ ಮತದಾನದ ಹಕ್ಕನ್ನು ರಕ್ಷಿಸುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ ಎಂದರು.

ಹೊಸ ನಾಯಕತ್ವಕ್ಕೆ ಆದ್ಯತೆ:ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಸಂಘಟಿಸುವ ಹಾಗೂ ಹೊಸ ನಾಯಕತ್ವವನ್ನು ಬೆಳೆಸುವ ಉದ್ದೇಶದಿಂದ ಎಐಸಿಸಿ ‘ಸಂಘಟನಾ ಸೃಜನ್ ಅಭಿಯಾನ–2’ ಆರಂಭಿಸಿದೆ. ಇದರ ಅಂಗವಾಗಿ ಉಡುಪಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಹಾಗೂ 10 ಬ್ಲಾಕ್‌ಗಳಿಗೆ ತೆರಳಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಬಳಿಕ ಬ್ಲಾಕ್ ಹಾಗೂ ಗ್ರಾಮ ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ಐದು ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಮುಂದುವರಿದಿರುವವರನ್ನು ಬದಲಾಯಿಸಿ, ಹೊಸ ನಾಯಕತ್ವಕ್ಕೆ ಅವಕಾಶ ನೀಡಲು ಆದ್ಯತೆ ನೀಡಲಾಗುವುದು. ಈ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಅಭಿಪ್ರಾಯವೂ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಅಬ್ದುಲ್ ರವೂಫ್, ಶಾಲೇಟ್ ಪಿಂಟೋ, ಪ್ರಸಾದ್‌ರಾಜ್ ಕಾಂಚನ್, ರಾಜು ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಶಾಂತ್ ಜತ್ತನ್ನ, ಭಾಸ್ಕರ್ ರಾವ್ ಕಿದಿಯೂರು, ಬಿ. ನರಸಿಂಹಮೂರ್ತಿ ಹಾಗೂ ಜ್ಯೋತಿ ಹೆಬ್ಬಾರ್ ಉಪಸ್ಥಿತರಿದ್ದರು.