ಮೊಬೈಲ್, ಪೆನ್‌ಡ್ರೈವ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಇದ್ದ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವಂತೆ ಡಿಜಿಪಿ ಸೂಚನೆ ನೀಡಿದ್ದು, ಈ ಕುರಿತು ಬೆಳಗಾವಿ ಜೈಲು ಅಧಿಕಾರಿಗಳಿಗೆ ಅಧಿಕೃತ ಇ-ಮೇಲ್ ಕಳುಹಿಸಲಾಗಿದೆ. ಜೈಲು ಮುಖ್ಯ ಅಧೀಕ್ಷಕರಿಗೂ ಮಾಹಿತಿ ನೀಡಲಾಗಿದ್ದು, ಸ್ಥಳಾಂತರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಯಾವುದೇ ಸಮಯದಲ್ಲಿ ಎಸ್ಕಾರ್ಟ್ ಮೂಲಕ ಅವರನ್ನು ಸ್ಥಳಾಂತರಿಸುವ ಸಾಧ್ಯತೆಯಿದೆ.

ಇತ್ತೀಚೆಗೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಹಾಗೂ ಮತ್ತೊಬ್ಬ ವಿಚಾರಣಾಧೀನ ಕೈದಿಯ ಬಳಿ ಮೊಬೈಲ್ ಫೋನ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿದ್ದವು.

ಸಿಸಿಬಿ ಪೊಲೀಸರು ಪರಿಶೀಲನೆ ವೇಳೆ ಮೊಬೈಲ್ ಫೋನ್, ಚಾರ್ಜರ್, ಪೆನ್‌ಡ್ರೈವ್ ಹಾಗೂ ನೋಟ್‌ಬುಕ್‌ಗಳನ್ನು ವಶಪಡಿಸಿಕೊಂಡಿದ್ದರು. ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿರುವ ಘಟನೆ ಚರ್ಚೆಗೆ ಗ್ರಾಸವಾಗಿದ್ದು, ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.