ದಸರಾ ರಜೆ ಹಿನ್ನೆಲೆ: ಬೆಂಗಳೂರಿನಿಂದ 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ

ಬೆಂಗಳೂರು: ದಸರಾ ಹಬ್ಬ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಿದೆ.

ಅಕ್ಟೋಬರ್ 16ರಿಂದ 20ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿದ್ದು, ರಜೆ ಮುಗಿಸಿ ರಾಜಧಾನಿಗೆ ಮರಳುವ ಪ್ರಯಾಣಿಕರಿಗಾಗಿ ಅಕ್ಟೋಬರ್ 20 ಮತ್ತು 21ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮ ತಿಳಿಸಿದೆ.

ಪ್ರಮುಖ ಬಸ್ ನಿಲ್ದಾಣಗಳಿಂದ ಸಂಚಾರ

ಬೆಂಗಳೂರಿನ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.

ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವಿರುವ ಬಸ್‌ಗಳನ್ನು ವಿಜಯನಗರ ಟಿಟಿಎಂಸಿ, ಯಶವಂತಪುರ ಟಿಟಿಎಂಸಿ, ಜಯನಗರ ಟಿಟಿಎಂಸಿ, ಬನಶಂಕರಿ ಟಿಟಿಎಂಸಿ, ಬಸವೇಶ್ವರನಗರ ಮತ್ತು ದೊಮ್ಮಲೂರು ಬಸ್ ನಿಲ್ದಾಣಗಳಿಂದಲೂ ಕಾರ್ಯಾಚರಣೆಗೊಳಿಸಲಾಗುತ್ತದೆ.

ಮೈಸೂರಿಗೆ 700 ಬಸ್‌ಗಳ ವ್ಯವಸ್ಥೆ

ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಒಟ್ಟು 700 ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ. ಇದರಲ್ಲಿ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಸಂಚರಿಸುವ 300 ಹೆಚ್ಚುವರಿ ಬಸ್‌ಗಳು ಸೇರಿವೆ.

ಉಳಿದ 400 ಬಸ್‌ಗಳು ಮೈಸೂರಿನಿಂದ ಚಾಮುಂಡಿ ಬೆಟ್ಟ, ಕೆಆರ್‌ಎಸ್ ಮತ್ತು ಬೃಂದಾವನ ಉದ್ಯಾನವನ, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ. ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್. ನಗರ ಹಾಗೂ ಗುಂಡ್ಲುಪೇಟೆ ಸೇರಿದಂತೆ ವಿವಿಧ ಪ್ರವಾಸಿ ಮತ್ತು ಧಾರ್ಮಿಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸಲಿವೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳುವ ಪ್ರಯಾಣಿಕರು ನೇರ ಹವಾನಿಯಂತ್ರಿತ ಫ್ಲೈಬಸ್ ಸೇವೆಯನ್ನೂ ಬಳಸಬಹುದು.

ಕರಾವಳಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಿಗೆ ಬಸ್ ಸೇವೆ

ದಸರಾ ರಜೆ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ದಾವಣಗೆರೆ, ಗೋಕರ್ಣ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ ಹಾಗೂ ಕಲಬುರಗಿ ಸೇರಿದಂತೆ ರಾಜ್ಯದ ಹಲವು ನಗರಗಳಿಗೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ.

ಅಂತಾರಾಜ್ಯ ಪ್ರಯಾಣಕ್ಕೂ ವ್ಯವಸ್ಥೆ

ಹೈದರಾಬಾದ್, ವಿಜಯವಾಡ, ನೆಲ್ಲೂರು, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿರಾಪಳ್ಳಿ, ಕುಂಭಕೋಣಂ, ಕೊಯಮತ್ತೂರು, ಮಧುರೈ, ಪಣಜಿ, ಮಂತ್ರಾಲಯ, ಪುಣೆ, ಎರ್ನಾಕುಲಂ ಹಾಗೂ ಪಾಲಕ್ಕಾಡ್ ಸೇರಿದಂತೆ ವಿವಿಧ ಅಂತಾರಾಜ್ಯ ಮಾರ್ಗಗಳಲ್ಲಿಯೂ ಬಸ್ ಸೇವೆ ಲಭ್ಯವಿರಲಿದೆ.

ಮುಂಗಡ ಟಿಕೆಟ್ ಕಾಯ್ದಿರಿಸುವವರಿಗೆ ರಿಯಾಯಿತಿ

ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ವಿಶೇಷ ರಿಯಾಯಿತಿಯನ್ನೂ ಘೋಷಿಸಿದೆ.

  • ಒಂದೇ ಕಾಯ್ದಿರಿಸುವಿಕೆಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ ಮೂಲ ಪ್ರಯಾಣ ದರದಲ್ಲಿ ಶೇ. 5ರಷ್ಟು ರಿಯಾಯಿತಿ ದೊರೆಯಲಿದೆ.
  • ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ವಾಪಸಾತಿ ಪ್ರಯಾಣದ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಲಭ್ಯವಿದೆ.

ಪ್ರಯಾಣಿಕರು ನಿಗಮದ ಅಧಿಕೃತ ವೆಬ್‌ಸೈಟ್ www.ksrtc.karnataka.gov.in ಅಥವಾ ಮೊಬೈಲ್ ಆ್ಯಪ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.