ಮಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಕರಾವಳಿಯ ಪ್ರಮುಖ ಹಬ್ಬವಾದ ಮಂಗಳೂರು ದಸರಾ ಸಂದರ್ಭದಲ್ಲಿ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಸರಾ ಹಬ್ಬದ ಆಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿರುವ ನೂರಾರು ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಧರಣಿ ನಡೆಸಿದರು. ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಬಲ ನೀಡಿದೆ.
ಪರೀಕ್ಷೆಗಳನ್ನು ಮುಂದೂಡುವಂತೆ ಆಡಳಿತ ಮಂಡಳಿಗೆ ಮೊದಲೇ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ.
ದಸರಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಎದುರಾಗಿರುವ ಸಮಸ್ಯೆಯನ್ನು ಪರಿಹರಿಸಿ, ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಿವೆ. ಸದ್ಯ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ಮುಂದುವರಿದಿದ್ದು, ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಿದ್ದಾರೆ.















