06 ಮಂದಿ ಶಿಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಅನುದಾನರಹಿತ ಕಾಲೇಜುಗಳು ಪದವಿ ಪೂರ್ವ ಶಿಕ್ಷಣದಲ್ಲಿ ಯಾವುದೇ ರೀತಿಯ ಅನುದಾನವಿಲ್ಲದೇ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜತೆಗೆ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಿದೆ. ಆದರೆ ಸರಕಾರಗಳು ಶಿಕ್ಷಣಾಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಬಗ್ಗೆ ಬೇಸರವನ್ನು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷರಾದ ಡಾ.ಎಂ ಮೋಹನ್ ಆಳ್ವ ಅವರು ವ್ಯಕ್ತಪಡಿಸಿದರು.

ಅವರು ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇವರ ಆಶ್ರಯದಲ್ಲಿ ಬೆಳ್ತಂಗಡಿಯ ‘ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್’ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ‘ಉತ್ತಮ ಶಿಕ್ಷಕ ಪ್ರಶಸ್ತಿ 2026’ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಕುಪ್ಮಾ ರಾಜ್ಯ ಸಮಿತಿಯ ಗೌರವ ಅಧ್ಯಕ್ಷರಾದ ಡಾ ಎಂ ಬಿ ಪುರಾಣಿಕ್ ಅವರು ಉದ್ಘಾಟಿಸಿ ಮಾತನಾಡಿದರು. ಕುಪ್ಮಾವು ಸಾಗಿಬಂದ ಯಶೋಗಾಥೆ ಮತ್ತು ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ವಿವರಿಸಿದರು. ಉಜಿರೆ ಎಸ್ ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಮಾತನಾಡಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತೀವೆ ಎಂದು ಹೇಳಿದರು.

ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ :
ಎಕ್ಸಲೆಂಟ್ ಸೈನ್ಸ್ ಆ್ಯಂಡ್ ಕಾಮರ್ಸ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪ್ರಶಾಂತ್ ರಾಮಚಂದ್ರ ಹೆಗಡೆ , ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪ್ರೊ. ಅನಿಲ್ ಮಸ್ಕರೇನಸ್, ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ ಪ್ರಸನ್ನ ಕುಮಾರ್ ಐತಾಳ್, ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಶಾರದಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಪ್ರಕಾಶ್ ನಾಯ್ಕ್ ಕೆ, ಬಂಟ್ಸ್ ಹಾಸ್ಟೆಲ್ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲರಾದ ಶ್ರೀಮತಿ ಯಶೋಧ ಯು ಶೆಟ್ಟಿ, ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಇವರನ್ನು ಗಣ್ಯರು ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಜನಾರ್ದನ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕುಪ್ಮಾ ರಾಜ್ಯ ಸಮಿತಿಯ ಗೌರವ ಅಧ್ಯಕ್ಷರಾದ ಡಾ ಕೆ.ಸಿ ನಾಯ್ಕ್, ಉಪಾಧ್ಯಕ್ಷರಾದ ಡಾ ಸುಧಾಕರ ಶೆಟ್ಟಿ, ಜಂಟಿ ಕಾರ್ಯದರ್ಶಿ ವಿಶ್ವನಾಥ ಶೇಷಾಛಲ, ಸದಸ್ಯರಾದ ಡಾ ಬಿ.ಕೆ ದೇವರಾಜ್, ಜಿಲ್ಲಾ ಸಮಿತಿಯ ಗೌರವ ಅಧ್ಯಕ್ಷರಾದ
ಡಾ ಸಂಜೀವ ರೈ, ಸದಸ್ಯರಾದ ಪೂರನ್ ವರ್ಮ ಉಪಸ್ಥಿತರಿದ್ಧರು.

ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಕಾಲೇಜಿನ ಕನ್ನಡ ಉಪನ್ಯಾಸಕ ಡಾ ದಿವಾ ಕೊಕ್ಕಡ ನಿರೂಪಿಸಿದರು. ಪ್ರಾಸ್ತಾವಿಕ ಮಾತುಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಕಾರ್ಯದರ್ಶಿ ಡಾ ಮಂಜುನಾಥ್ ರೇವಣ್ಕರ್ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರು ಧನ್ಯವಾದ ಸಮರ್ಪಣೆ ಮಾಡಿದರು.