ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ: 19 ಮಂದಿ ಸಾವು, 25 ಜನರಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ ಕೋಲ್ಕತ್ತಾದ ಚೋರ್ಬಗಾನ್ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಜನಪ್ರಿಯತೆ ಗಳಿಸಿರುವ ಚೋರ್ಬಗಾನ್ ದುರ್ಗಾ ಪೂಜೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಮಳೆಯ ಕಾರಣ ಪೆಂಡಾಲ್‌ನ ಹೊರಗೆ ಕಾಯುತ್ತಿದ್ದ ಜನರು ಏಕಾಏಕಿ ಒಳಗೆ ನುಗ್ಗಿದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂಜಾ ಆಯೋಜಕರು ಮಾಡಿದ ಘೋಷಣೆಯೊಂದರಿಂದ ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, 19 ಮಂದಿ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರನ್ನು ದಾಖಲಿಸಿರುವ ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ, ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದರ ಜೊತೆಗೆ, ಪ್ರತಿ ಕುಟುಂಬದ ಒಬ್ಬರಿಗೆ ‘ಗ್ರೂಪ್ ಡಿ’ ಶ್ರೇಣಿಯ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದಾರೆ.