ಬೆಳಗಾವಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ‘ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಣಿ ಕಿತ್ತೂರು ಚೆನ್ನಮ್ಮ ಅವರ ಇತಿಹಾಸ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ತಿಳಿಸಿದರು.
ಕಿತ್ತೂರು ಕೋಟೆಯ ಮರುಸೃಷ್ಟಿ ಹಾಗೂ ಅಭಿವೃದ್ಧಿಗೆ ಅನುದಾನ ನೀಡುವಂತೆ ಸ್ಥಳೀಯ ಶಾಸಕ ಬಾಬಾಸಾಹೇಬ್ ಪಾಟೀಲ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಮುಂದಿನ ಬಜೆಟ್ನಲ್ಲಿ ಕಿತ್ತೂರು ಕೋಟೆಯ ಅಭಿವೃದ್ಧಿಗೆ 40 ಕೋಟಿ ರೂ. ಮೀಸಲಿಡಲಾಗುವುದು ಎಂದು ಭರವಸೆ ನೀಡಿದರು. ಈ ಸಂಬಂಧ ತಕ್ಷಣವೇ ಆದೇಶ ನೀಡುವುದಾಗಿಯೂ ಅವರು ಹೇಳಿದರು.















