ಎಸ್‌ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ನೇರ ಪ್ರಸಾರ ವೀಕ್ಷಣೆ

ಬ್ರಹ್ಮಾವರ: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿನಾಚರಣೆಯ ಪ್ರಯುಕ್ತ ಬ್ರಹ್ಮಾವರ ಆರಕ್ಷಕ ಠಾಣೆ ಹಾಗೂ ಎಸ್‌ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ದೇಶದ ಏಕತೆ, ಅಖಂಡತೆ ಹಾಗೂ ಸಮಗ್ರತೆಯನ್ನು ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಮೂಲ್ಯ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ನೇರ ಪ್ರಸಾರದ ಮೂಲಕ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತೆಯ ಮಹತ್ವ, ದೇಶಪ್ರೇಮ, ಶಿಸ್ತು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಸಮಾಜದಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸುವ ಕುರಿತು ಅರಿವು ಮೂಡಿಸಲಾಯಿತು.

ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದ ಭವ್ಯ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂಬ ಸಂದೇಶವನ್ನು ಈ ಕಾರ್ಯಕ್ರಮ ನೀಡಿತು.

ಈ ಸಂದರ್ಭದಲ್ಲಿ ಬ್ರಹ್ಮಾವರ ಆರಕ್ಷಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಿದರು.